Headlines

2026 Winter Session: ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ರೆಡಿ

ಬೆಳಗಾವಿ: ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆ ಪೊಲೀಸ್ ಇಲಾಖೆ ಭದ್ರತಾ ಸಿದ್ಧತೆಗಳನ್ನು ಚುರುಕುಗೊಳಿಸಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್‌ 2ರಿಂದ 9 ದಿನಗಳ ಕಾಲ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ನಡೆಯಲಿದೆ. ಸುವರ್ಣ ವಿಧಾನಸೌಧದಲ್ಲಿ ಡಿ.2ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸಭೆಯ ಅಧಿವೇಶನ ಸಮಾವೇಶಗೊಳ್ಳಲು ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ ಎಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾನ್ಯವಾಗಿ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಕಾಲ ಅಧಿವೇಶನ ನಡೆಯುವುದು ವಾಡಿಕೆ. ಆದರೆ, ಈ ಬಾರಿಯ ಚಳಿಗಾಲದ ಅಧಿವೇಶನವನ್ನು 9 ದಿನಗಳಿಗೆ ಸೀಮಿತಗೊಳಿಸಲಾಗಿದೆ. ಅಧಿವೇಶನದ ಸಂದರ್ಭದಲ್ಲಿ ರೈತರು, ಕಾರ್ಮಿಕರು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ, ಧರಣಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಸಿದ್ಧತೆ ನಡೆಸಲಾಗಿದೆ.

ಭದ್ರತಾ ವ್ಯವಸ್ಥೆ ಪರಿಶೀಲಿಸಿದ ಪೊಲೀಸ್ ಆಯುಕ್ತರು

ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಅವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಈಗಾಗಲೇ ಭದ್ರತಾ ವ್ಯವಸ್ಥೆಯ ಪರಿಶೀಲನೆ ಆರಂಭಿಸಿದ್ದಾರೆ. ಪೊಲೀಸ್ ಆಯುಕ್ತರು ಖುದ್ದಾಗಿ ಸುವರ್ಣಸೌಧ ಸೇರಿದಂತೆ ಪ್ರತಿಭಟನೆಗಳು ನಡೆಯುವ ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರತಿಭಟನೆಗಳ ಸಂದರ್ಭದಲ್ಲಿ ಜನಸಂದಣಿ ನಿಯಂತ್ರಣ, ಪ್ರತಿಭಟನಾಕಾರರ ನಿರ್ವಹಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಯಾವ ಸ್ಥಳದಲ್ಲಿ ಎಷ್ಟು ಸಿಬ್ಬಂದಿಯನ್ನು ನಿಯೋಜಿಸಬೇಕು ಎಂಬುದರ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ.

7 ಸಾವಿರ ಪೊಲೀಸರ ನಿಯೋಜನೆಗೆ ಸಿದ್ಧತೆ

ಅಧಿವೇಶನದ ಭದ್ರತೆಗಾಗಿ ಬರೋಬ್ಬರಿ 7 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ಇಲಾಖೆ ಯೋಜನೆ ರೂಪಿಸಿದೆ. ಬೆಳಗಾವಿ ಜಿಲ್ಲೆಯ ಪೊಲೀಸರ ಜೊತೆಗೆ ರಾಜ್ಯದ ಇತರೆ ಜಿಲ್ಲೆಗಳಿಂದಲೂ ಹೆಚ್ಚುವರಿ ಸಿಬ್ಬಂದಿಯನ್ನು ಕರೆಸಿಕೊಳ್ಳಲು ಸಿದ್ಧತೆ ನಡೆಸಲಾಗುತ್ತಿದೆ.

ಇದರ ಜೊತೆಗೆ 35 ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲು ನಿರ್ಧರಿಸಲಾಗಿದ್ದು, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಒಟ್ಟಿನಲ್ಲಿ, ಅಧಿವೇಶನದ ಅವಧಿಯಲ್ಲಿ ಪ್ರತಿಭಟನೆಗಳು ಹಾಗೂ ವಿವಿಧ ಸಂಘಟನೆಗಳ ಹೋರಾಟಗಳನ್ನು ಗಮನದಲ್ಲಿಟ್ಟುಕೊಂಡು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ರೂಪಿಸುತ್ತಿದೆ. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

Leave a Reply

Your email address will not be published. Required fields are marked *