ಬೆಂಗಳೂರು: ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡಿರುವ ಕೃಪಾ ಆಳ್ವಾ ಅವರನ್ನು ಸಿಸಿಬಿ ಅಧಿಕಾರಿಗಳು ಎರಡನೇ ಬಾರಿಗೆ ವಿಚಾರಣೆಗೆ ಒಳಪಡಿಸಿದ್ದಾರೆ.
ನವೆಂಬರ್ 9ರಂದು ತನಿಖಾಧಿಕಾರಿ ಎಸಿಪಿ ರವಿ ಅವರ ಮುಂದೆ ಹಾಜರಾಗಿದ್ದ ಕೃಪಾ ಆಳ್ವಾ ಅವರನ್ನು ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಇದೀಗ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದ್ದು, ನಗರದ ಪೊಲೀಸ್ ಕಮಿಷನರ್ ಕಚೇರಿ ಆವರಣದಲ್ಲಿರುವ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಅವರು ಆಗಮಿಸಿದ್ದರು. ಈ ಬಾರಿ ಸುಮಾರು ಒಂದು ಗಂಟೆಗಳ ಕಾಲ ಅಧಿಕಾರಿಗಳು ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.
ಕೃಪಾ ಆಳ್ವಾ ಅವರನ್ನು ಸಿಸಿಬಿ ಕೇಳಿದ್ದೇನು?
ಎರಡನೇ ಸುತ್ತಿನ ವಿಚಾರಣೆ ವೇಳೆ ಕೇರಳದ ಸಂಪರ್ಕ, ಸ್ಟಿಂಗ್ ಆಪರೇಷನ್ ವಿಡಿಯೋ, ಪತ್ರಕರ್ತರೊಂದಿಗಿನ ಸಂಪರ್ಕ ಹಾಗೂ ವಿಡಿಯೋ ವೈರಲ್ ಆದ ವಿಚಾರಗಳ ಕುರಿತು ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಕೃಪಾ ಆಳ್ವಾ ಅವರು ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂಬ ನಿಲುವನ್ನೇ ಮತ್ತೆ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಹಿರಿಯ ಅಧಿಕಾರಿಗಳ ಮುಂದೆ ತಮ್ಮ ಹೇಳಿಕೆಯನ್ನು ದಾಖಲಿಸಿದ್ದು, ಮತ್ತೆ ಮತ್ತೆ ಅದೇ ಪ್ರಶ್ನೆಗಳಿಗೆ ಉತ್ತರಿಸುವುದಾದರೂ ಏಕೆ ಎಂದು ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ.
ಹೋಟೆಲ್‌ನಲ್ಲಿ ಅರ್ಧ ಗಂಟೆ ಮಾತ್ರ ಇದ್ದಿದ್ದೆ ಎಂದ ಕೃಪಾ ಆಳ್ವಾ!
ವಿಚಾರಣೆ ವೇಳೆ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿರುವ ಕೃಪಾ ಆಳ್ವಾ, ತಾವು ಹೋಟೆಲ್‌ನಲ್ಲಿ ಕೇವಲ ಅರ್ಧ ಗಂಟೆ ಮಾತ್ರ ಇದ್ದು ಅಲ್ಲಿಂದ ತೆರಳಿದ್ದಾಗಿ ಹೇಳಿದ್ದಾರೆ ಎನ್ನಲಾಗಿದೆ. ಅಲ್ಲಿ ವಿಡಿಯೋ ಚಿತ್ರೀಕರಣ ನಡೆಯುತ್ತಿರುವ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ವಿಡಿಯೋ ರೆಕಾರ್ಡ್ ಮಾಡಿರುವ ವಿಚಾರವೂ ತಮಗೆ ತಿಳಿದಿರಲಿಲ್ಲ ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಅಲ್ಲದೆ, ಈ ಘಟನೆ ನಡೆದು ಹಲವು ವರ್ಷಗಳಾಗಿರುವುದರಿಂದ ಕೆಲವು ವಿಚಾರಗಳು ನೆನಪಿಲ್ಲ. ಅಂದು ಕೇರಳದ ಮಹಿಳೆಯೊಬ್ಬರು ದೂರು ನೀಡಿದ್ದ ಸಂದರ್ಭದಲ್ಲಿ ಹೈಕಮಾಂಡ್‌ನ ಹಿರಿಯ ನಾಯಕರೊಬ್ಬರಿಗೆ ಮಾಹಿತಿ ನೀಡಿದ್ದೆ. ನಂತರ ಏನಾಯಿತು ಎಂಬುದು ತಮಗೆ ತಿಳಿದಿಲ್ಲ ಎಂದು ಸಿಸಿಬಿ ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ
ಸ್ಟಿಂಗ್ ವಿಡಿಯೋ ಚಿತ್ರೀಕರಣ ಮತ್ತು ಅದು ವೈರಲ್ ಆದ ವಿಚಾರಗಳ ಬಗ್ಗೆ ತನಗೆ ಯಾವುದೇ ಮಾಹಿತಿ ಇಲ್ಲ ಎಂದು ಕೃಪಾ ಆಳ್ವಾ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ವಿಚಾರಣೆ ವೇಳೆ ಕೆಲವು ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ಸಿಗದ ಹಿನ್ನೆಲೆಯಲ್ಲಿ ಅಗತ್ಯವಿದ್ದರೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಒಟ್ಟಿನಲ್ಲಿ, ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಮುಂದುವರಿದಿದ್ದು, ಕೃಪಾ ಆಳ್ವಾ ಅವರ ಹೇಳಿಕೆಗಳ ಆಧಾರದ ಮೇಲೆ ಮುಂದಿನ ಹಂತದ ತನಿಖೆ ನಡೆಯುವ ಸಾಧ್ಯತೆಯಿದೆ.
